Monday, October 8, 2007

ಪುಣ್ಯಕೋಟಿಯ ಹಾಡು

ಧರಣಿಮಂಡಲ ಮಧ್ಯದೊಳಗೆ
ಮೆರೆಯುತಿಹ ಕರ್ನಾಟ ದೇಶದೊ
ಳಿರುವ ಕಾಳಿಂಗನೆಂಬ ಗೊಲ್ಲನ
ಪರಿಯನೆಂತು ಪೇಳ್ವೆನೊ

ಗೊಲ್ಲ ದೊಡ್ಡಿಯಲಿರುವ ಪಶುಗಳ
ಎಲ್ಲ ಬೆಟ್ಟದ ಮೇಲೆ ಮೇಯುತ
ಹುಲ್ಲುವೊಳ್ಳೆ ನೀರ್ಗಳಿಂದಲೆ
ಅಲ್ಲಿ ಮೆರೆದವರಣ್ಯದಿ

ಎಳೆಯ ಮಾವಿನ ಮರದ ಕೆಳಗೆ
ಕೊಳಲನೂದುತ ಗೊಲ್ಲ ಗೌಡನು
ಬಳಸಿ ನಿಂದ ತುರುಗಳನ್ನು
ಬಳಿಗೆ ಕರೆದನು ಹರುಷದಿ

ಗಂಗೆ ಬಾರೆ ಗೌರಿ ಬಾರೆ
ತುಂಗಭದ್ರೆ ತಾಯಿ ಬಾರೆ
ಪುಣ್ಯಕೋಟಿ ನೀನು ಬಾರೆ
ಎಂದು ಗೊಲ್ಲನು ಕರೆದನು

ಗೊಲ್ಲ ಕರೆದಾ ದನಿಯ ಕೇಳಿ
ಎಲ್ಲ ಹಸುಗಳು ಬಂದು ನಿಂದು
ಚೆಲ್ಲಿ ಸೂಸಿ ಹಾಲು ಕರೆಯಲು
ಅಲ್ಲಿ ತುಂಬಿತು ಬಿಂದಿಗೆ

ಹಬ್ಬಿದಾಮಲೆ ಮಧ್ಯದೊಳಗೆ
ಅರ್ಭುತಾನೆಂದೆಂಬ ವ್ಯಾಘ್ರನು
ಅಬ್ಬರಿಸಿ ಹಸಿಹಸಿದು ಬೆಟ್ಟದ
ಕಿಬ್ಬಿಯಾಳು ತಾನಿದ್ದನು

ಸಿಡಿದು ರೋಷದಿ ಗುಡುಗುತಾ ಹುಲಿ
ಘುಡುಘುಡಿಸಿ ಭೋರಿಡುತವ್ಯಾಘ್ರನು
ತುಡುಕಿ ಎರಗಿದ ರಭಸ ಕೇಳಿ
ಓಡಿಹೋದವು ಹಸುಗಳು

ತನ್ನ ಮಗನಾ ಪಡೆದ ಪಶುವು
ತನ್ನ ಕಂದನ ನೆನೆದುಕೊಂಡು
ಪುಣ್ಯಕೋಟಿಯೆಂಬ ಹಸುವು
ಚೆಂದದಿಂದ ತಾ ಬರುತಿರೆ

ಇಂದೆನಗೆ ಆಹಾರ ಸಿಕ್ಕಿತು
ಎಂದು ಬೇಗನೆ ದುಷ್ಟ ವ್ಯಾಘ್ರನು
ಬಂದು ಬಳಸಿ ಅಡ್ಡಗಟ್ಟಿ
ನಿಂದನಾ ಹುಲಿರಾಯನು

ಮೇಲೆ ಬಿದ್ದು ನಿನ್ನನೀಗಲೆ
ಬೀಳಹೊಯ್ವೆನು ನಿನ್ನ ಹೊಟ್ಟೆಯ
ಸೀಳಿಬಿಡುವೆನು ಎನುತ ಕೋಪದಿ
ಖೂಳವ್ಯಾಘ್ರನು ಕೂಗಲು

ಒಂದು ಬಿನ್ನಹ ಹುಲಿಯೆ ಕೇಳು
ಕಂದನಿರುವನು ದೊಡ್ಡಿಯಾಳಗೆ
ಒಂದು ನಿಮಿಷದಿ ಮೊಲೆಯ ಕೊಟ್ಟು
ಬಂದು ಸೇರುವೆನಿಲ್ಲಿಗೆ

ಹಸಿದವೇಳೆಗೆ ಸಿಕ್ಕಿದೊಡವೆಯ
ವಶವ ಮಾಡದೆ ಬಿಡಲು ನೀನು
ನುಸುಳಿ ಹೋಗುವೆ ಮತ್ತೆ ಬರುವೆಯ
ಹುಸಿಯ ನುಡಿಯುವೆನೆಂದಿತು

ಸತ್ಯವೆ ನಮ್ಮ ತಾಯಿ ತಂದೆ
ಸತ್ಯವೆ ನಮ್ಮ ಬಂಧು ಬಳಗ
ಸತ್ಯವಾಕ್ಯಕೆ ತಪ್ಪಿ ನಡೆದರೆ
ಮೆಚ್ಚನಾ ಪರಮಾತ್ಮನು

ಕೊಂದು ತಿನ್ನುವೆನೆಂಬ ಹುಲಿಗೆ
ಚಂದದಿಂದ ಭಾಷೆಕೊಟ್ಟು
ಕಂದ ನಿನ್ನನು ನೋಡಿ ಪೋಗುವೆ
ನೆಂದು ಬಂದಿತು ದೊಡ್ಡಿಗೆ

ಅಮ್ಮ ನೀನು ಸಾಯಲೇಕೆ
ನಮ್ಮ ತಬ್ಬಲಿ ಮಾಡಲೇಕೆ
ಸುಮ್ಮನಿಲ್ಲಿಯೆ ನಿಲ್ಲು ಎಂದು
ಅಮ್ಮನಿಗೆ ಕರು ಹೇಳಿತು

ಆರ ಮೊಲೆಯನು ಕುಡಿಯಲಮ್ಮ
ಆರ ಬಳಿಯಲಿ ಮಲಗಲಮ್ಮ
ಆರ ಸೇರಿ ಬದುಕಲಮ್ಮ
ಆರು ನನಗೆ ಹಿತವರು

ಕೊಟ್ಟ ಭಾಷೆಯ ತಪ್ಪಲಾರೆನು
ಕೆಟ್ಟ ಯೋಚನೆ ಮಾಡಲಾರೆನು
ನಿಷ್ಠೆಯಿಂದಲಿ ಪೋಪೆನಲ್ಲಿಗೆ
ಕಟ್ಟ ಕಡೆಗಿದು ಖಂಡಿತಾ

ಅಮ್ಮಗಳಿರ ಅಕ್ಕಗಳಿರ
ಎನ್ನ ತಾಯಾಡಹುಟ್ಟುಗಳಿರಾ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನೂ

ಮುಂದೆ ಬಂದರೆ ಹಾಯಬೇಡಿ
ಹಿಂದೆ ಬಂದರೆ ವೊದೆಯಬೇಡಿ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನೂ

ತಬ್ಬಲಿಯು ನೀನಾದೆ ಮಗನೆ
ಹೆಬ್ಬುಲಿಯ ಬಾಯನ್ನು ಹೊಗುವೆನು
ಇಬ್ಬರಾ ಋಣ ತೀರಿತೆಂದು
ತಬ್ಬಿಕೊಂಡಿತು ಕಂದನಾ

ಗೋವು ಸ್ನಾನವ ಮಾಡಿಕೊಂಡು
ಗವಿಯಬಾಗಿಲ ಸೇರಿನಿಂತು
ಸಾವಕಾಶವ ಮಾಡದಂತೆ
ತವಕದಲಿ ಹುಲಿಗೆಂದಿತು

ಖಂಡವಿದೆಕೋ ಮಾಂಸವಿದೆಕೋ
ಗುಂಡಿಗೆಯ ಬಿಸಿರಕ್ತವಿದೆಕೋ
ಚಂಡವ್ಯಾಘ್ರನೆ ನೀನಿದೆಲ್ಲವ
ನುಂಡು ಸಂತಸದಿಂದಿರು

ಪುಣ್ಯಕೋಟಿಯ ಮಾತಕೇಳಿ
ಕಣ್ಣನೀರನು ಸುರಿಸಿ ನೊಂದೂ
ಕನ್ನೆಯಿವಳನು ಕೊಂದು ತಿಂದರೆ
ಮೆಚ್ಚನಾ ಪರಮಾತ್ಮನೂ

ಎನ್ನವೊಡಹುಟ್ಟಿದಕ್ಕ ನೀನು
ನಿನ್ನ ಕೊಂದು ಏನ ಪಡೆವೆನು
ಅನ್ನೆಕಾರಿ ನಾನು ಎನುತಲಿ
ತನ್ನ ಮನದೊಳು ನೊಂದಿತು

ಮೂರುಮೂರ್ತಿಗೆ ಕೈಯಮುಗಿದು
ಸೇರಿ ಎಂಟುದಿಕ್ಕು ನೋಡಿ
ಹಾರಿ ಆಕಾಶಕ್ಕೆ ನೆಗೆದು
ಮೀರಿ ಪ್ರಾಣವ ಬಿಟ್ಟಿತೂ.

No comments: